ಮಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಕೋಮು ಪ್ರಚೋದನಕಾರಿಯಾಗಿ ಸಂದೇಶ ರವಾನಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಎಚ್ಚರಿಕೆ ನೀಡಿ ಪ್ರಕಟನೆ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೋವಿಡ್-19 ವೈರಸ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಬ್ಬುತ್ತಿದ್ದು, ಈ ನಡುವೆ ಒಂದು ನಿರ್ದಿಷ್ಟ ಕೋಮುವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮುಪ್ರಚೋದನಕಾರಿಯಾಗಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಕಂಡು ಬರುತ್ತಿದೆ.
ಈ ಹಿನ್ನಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 4 ಕ್ರಿಮಿನಲ್ ಪ್ರಕರಣಗಳು ದಾಖಲಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತಹ ಫೇಸ್ಬುಕ್, ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ, ಚಿತ್ರಗಳನ್ನು ಪ್ರಸಾರಪಡಿಸಿದಲ್ಲಿ ಅಂತಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಿಕೊಳ್ಳಲಾಗುವುದು. ಹಾಗೂ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹೋಂ ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಇಂತಹ ಕೃತ್ಯದಲ್ಲಿ ಭಾಗಿಯಾದರೆ ಅಂತಹವರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮಿ ಪ್ರಸಾದ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
0 comments:
Post a Comment