ನವದೆಹಲಿ (ಕರಾವಳಿ ಟೈಮ್ಸ್) : ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಲ್ಲಿ ಎಲ್ಲರಿಗೂ ಕೊರೋನಾ ವೈರಸ್ ಪರೀಕ್ಷಾ ಸೌಲಭ್ಯ ಉಚಿತವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಲ್ಲಿ ಎಲ್ಲಾ ನಾಗರಿಕರಿಗೆ ಉಚಿತ ಕೊವಿಡ್-19 ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ಉಚಿತ ಪರೀಕ್ಷೆ ನಡೆಸುವಂತೆ ಸರ್ಕಾರದಿಂದ ಅನುಮತಿ ಪಡೆದ ಖಾಸಗಿ ಪ್ರಯೋಗಾಲಯಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಅಥವಾ ಐಸಿಎಂಆರ್‍ನಿಂದ ಅನುಮತಿ ಪಡೆದ ಪ್ರಯೋಗಾಲಯಗಳಲ್ಲಿ ಮಾತ್ರ ಕೊವಿಡ್-19 ಪರೀಕ್ಷೆಗೆ ಅವಕಾಶ ನೀಡಬೇಕು ಮತ್ತು ಅದು ಉಚಿತವಾಗಿ ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.
ಪ್ರಸ್ತುತ ಖಾಸಗಿ ಪ್ರಯೋಗಾಲಯಗಳಲ್ಲಿ ಕೊವಿಡ್-19 ಪರೀಕ್ಷೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದಕ್ಕಾಗಿ 4500 ರೂಪಾಯಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಇದು ದುಬಾರಿಯಾಗುತ್ತಿದ್ದು, ಉಚಿತವಾಗಿಯೇ ಪರೀಕ್ಷೆ ನಡೆಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ವಿಡಿಯೋಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು ಭಾರತದಲ್ಲಿನ 118 ಪ್ರಯೋಗಾಲಯಗಳು ದಿನಕ್ಕೆ 15,000 ಟೆಸ್ಟ್ ನಡೆಸುವ ಸಾಮರ್ಥ್ಯವನ್ನು ಹೊಂದಿವೆ, ಮತ್ತು 47 ಖಾಸಗಿ ಪ್ರಯೋಗಾಲಯಗಳು ಸಹ ಈ ಪರೀಕ್ಷೆ ನಡೆಸಲಿದೆ ಎಂದು ಮೆಹ್ತಾ ವಾದಿಸಿದರು. ಕೊರೋನಾ ಪರೀಕ್ಷೆಗಳಿಗೆ ಪ್ರಯೋಗಾಲಯಗಳು ಹಣ ವಿಧಿಸಲು ಅವಕಾಶ ಕಲ್ಪಿಸಬಾರದು ಎಂದು ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ. ಖಾಸಗಿ ಸಂಸ್ಥೆಗಳಿಂದ ಕರೋನಾ ಪರೀಕ್ಷೆಗೆ ಗರಿಷ್ಠ 4,500 ರೂಪಾಯಿಗಳನ್ನು ನಿಗದಿಪಡಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಲಹೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.
0 comments:
Post a Comment