ಮಂಗಳೂರು (ಕರಾವಳಿ ಟೈಮ್ಸ್) : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ದ.ಕ. ಜಿಲ್ಲಾ ಸಮಿತಿ ವಿರೋಧಿಸಿದೆ.
ಕೋವಿಡ್-19 ಲಾಕ್‍ಡೌನ್‍ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಸರಕಾರ ಜನರ ಜೊತೆ ನಿಲ್ಲಬೇಕೆ ಹೊರತು ಜನರನ್ನು ಸಂಕಷ್ಟಕ್ಕೀಡುಮಾಡಬಾರದು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ವೈದ್ಯಕೀಯ ಶಿಕ್ಷಣದ ವ್ಯಾಪಾರೀಕರಣವನ್ನು ಸರಕಾರ ಪೆÇ್ರೀತ್ಸಾಹಿಸುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ದ.ಕ. ಜಿಲ್ಲಾಧ್ಯಕ್ಷೆ ಮಾಧುರಿ ಬೋಳಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರಕಾರ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಳದ ಆದೇಶ ಹೊರಡಿಸಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬರುವ ವಿದ್ಯಾರ್ಥಿಗಳು ಶಿಕ್ಷಣದಿಂದ ಇನ್ನೂ ವಂಚಿತರಾಗಲಿದ್ದಾರೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಜಿಲ್ಲಾ ಕಾರ್ಯದರ್ಶಿ ವಿಕಾಸ್ ಕುತ್ತಾರ್ ಅಭಿಪ್ರಾಯಪಟ್ಟಿದ್ದಾರೆ.
ಸರಕಾರ ಕೂಡಲೇ ಶುಲ್ಕ ಹೆಚ್ಚಳದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ದ.ಕ. ಜಿಲ್ಲಾ ಸಮಿತಿಯು ಆಗ್ರಹಿಸಿದೆ.
0 comments:
Post a Comment