ಜೂನ್ 25 ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ, ಜೂನ್ 18ಕ್ಕೆ ಪಿಯುಸಿ ಇಂಗ್ಲಿಷ್ ಪರೀಕ್ಷೆ
ಬೆಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19ನಿಂದ ಮುಂದೂಡಿಕೆಯಾಗಿದ್ದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗಿದೆ. ಜೂನ್ 25 ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಾಗಲಿದ್ದು, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂನ್ 18ಕ್ಕೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿ ಯಡಿಯೂರಪ್ಪನವರು ಪರೀಕ್ಷೆ ನಡೆಸಲು ಅನುಮತಿ ನೀಡಿದ್ದಾರೆ. ಒಟ್ಟು 2,879 ಕೇಂದ್ರದಲ್ಲಿನ 43,720 ಕೊಠಡಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದರು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ಪ್ರಾರಂಭಕ್ಕೂ ಮುಂಚೆ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಎಂದವರು ತಿಳಿಸಿದರು.
ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬೇಕೇ ಬೇಡವೇ ಎನ್ನುವ ಚರ್ಚೆ ಇಲಾಖೆಯಲ್ಲಿ ನಡೆದಿದೆ. ಆದರೆ ನೀಟ್ ಪರೀಕ್ಷೆ ಬರೆಯುವರಿಗೆ ಇಂಗ್ಲಿಷ್ ಪರೀಕ್ಷೆ ಅಗತ್ಯವಾಗಿರುವ ಕಾರಣ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ವಿವರಿಸಿದರು.
0 comments:
Post a Comment