ವಿಟ್ಲ (ಕರಾವಳಿ ಟೈಮ್ಸ್) : ಇಲ್ಲಿನ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ಕಳೆದ ಎಪ್ರಿಲ್ 21 ರಂದು 16 ವರ್ಷದ ಅಪ್ರಾಪ್ತ ಬಾಲಕನಿಗೆ ದಿನೇಶ್ ಕನ್ಯಾನ ಎಂಬ ಆರೋಪಿಯ ನೇತೃತ್ವದ ತಂಡವು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಿಟ್ಲ ಠಾಣೆಯಲ್ಲಿ ಕಲಂ 341, 367, 325, 394, 504, 506, ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಪೆÇಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎಪ್ರಿಲ್ 21 ರಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ 16 ವರ್ಷ ಪ್ರಾಯದ ಅಪ್ರಾಪ್ತ ಬಾಲಕನು ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ದಿನೇಶ ಕನ್ಯಾನ ಮತ್ತು ಸುಮಾರು 16-17 ವರ್ಷ ಪ್ರಾಯದ ಕಾನೂನು ಸಂಘರ್ಷಕ್ಕೊಳಗಾದ ಮೂವರು ಬಾಲಕರು 2 ಮೋಟಾರು ಸೈಕಲಿನಲ್ಲಿ ಬಂದು ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ ಬಳಿಕ ಬಾಲಕನನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿ ಸ್ಥಳೀಯ ಶಾಲಾ ಮೈದಾನಕ್ಕೆ ಕೊಂಡೊಯ್ದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿ ಹಲ್ಲೆ ನಡೆಸಿ ಪಿರ್ಯಾದಿಯ ಜೇಬಿನಲ್ಲಿದ್ದ ಹಣವನ್ನು ಕಸಿದುಕೊಂಡಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಗ್ಗೆ ಆರೋಪಿಗಳಿಗೆ ಸಂಬಂಧಪಟ್ಟವರೇ ಮಾಡಿದ್ದಾರೆ ಎನ್ನಲಾದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಬುಧವಾರ ವೈರಲ್ ಆಗಿದ್ದು, ಈ ಬಗ್ಗೆ ಪೊಲೀಸರಿಗೆ ಹಲವು ದೂರುಗಳು ಸಲ್ಲಿಕೆಯಾದ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದೀಗ ಕ್ರಮ ಕೈಗೊಂಡಿದ್ದು, ಆರೋಪಿಗಳ ದಸ್ತಗಿರಿಗೆ ಬಲೆ ಬೀಸಿದ್ದಾರೆ.
0 comments:
Post a Comment