ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರ ತಂದೆ ಹಾಗೂ ಮನೆ ಕೆಲಸದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ಇಂದು ಬೆಳಗ್ಗೆ ಸುಧಾಕರ್ ಅವರ 82 ವರ್ಷ ಪ್ರಾಯದ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸುಧಾಕರ ಮನೆ ಕೆಲಸದವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಸುಧಾಕರ್ ಅವರು ತಾವು ಸ್ವಯಂ ಕ್ವಾರಂಟೈನ್ ಆಗುವುದಾಗಿ ಹೇಳಿದ್ದು ಮುಖ್ಯಮಂತ್ರಿಗಳ ಜೊತೆಗಿನ ಸಭೆಯಿಂದ ಹೊರಗುಳಿದಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಸುಧಾಕರ್, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.
0 comments:
Post a Comment