ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ಇದ್ಯಾವುದನ್ನೂ ಪರಿಗಣಿಸದೆ ರಾಜ್ಯ ಸರಕಾರ ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.
ಬೆಳಗಾವಿ ನಿವಾಸಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಎಂಬವರು ವಿಶೇಷ ಮನವಿ ಅರ್ಜಿ (ಎಸ್.ಎಲ್.ಪಿ) ಸಲ್ಲಿಸಿದ್ದು, ಪರೀಕ್ಷೆ ನಡೆಸಲು ನಿರ್ಧರಿಸುವ ಮೂಲಕ ಸರಕಾರ ಅಪ್ರಾಪ್ತ ಮಕ್ಕಳು, ಪೆÇೀಷಕರು ಮತ್ತು ಶಿಕ್ಷಣಾಧಿಕಾರಿಗಳ ಜೀವನವನ್ನು ಅಪಾಯಕ್ಕೆ ಸಿಲುಕಿಸಿದೆ. ಆದರೆ ಈ ಅಂಶಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪರಿಗಣಿಸಲು ನಿರಾಕರಿಸಿದೆ ಎಂದಿದ್ದಾರೆ.
ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಘೋಷಿಸಲಾಗಿದೆ. ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರೊಂದಿಗೆ ಇವರ ಪೆÇೀಷಕರು ಕೂಡ ಪ್ರಯಾಣ ಮಾಡುವ ಸಾಧ್ಯತೆಯಿದೆ. ರಾಜ್ಯಾದ್ಯಂತ 3 ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಕೇಂದ್ರದಲ್ಲೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಷ್ಟು ಮಾರ್ಗಸೂಚಿಗಳನ್ನು ಪಾಲಿಸಿ, ಎಚ್ಚರಿಕೆ ವಹಿಸಿದರೂ ಅಪಾಯದ ಭೀತಿ ಇರುತ್ತದೆ. ಇದು ಅಪ್ರಾಪ್ತರ ಬದುಕುವ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಅದ್ದರಿಂದ ಪರೀಕ್ಷಾ ವೇಳಾಪಟ್ಟಿಗೆ ತಡೆ ನೀಡಲು ನಿರಾಕರಿಸಿ ಹೈಕೋರ್ಟ್ ಮೇ 27 ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು. ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜೂನ್ 25ಕ್ಕೆ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕು. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಮತ್ತು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಿ ಅಂತಿಮ ಫಲಿತಾಂಶ ನೀಡುವಂತೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
0 comments:
Post a Comment