ಮುಂದಿನ 6 ತಿಂಗಳಲ್ಲಿ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ
ನವದೆಹಲಿ (ಕರಾವಳಿ ಟೈಮ್ಸ್) : ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಸೋಮವಾರ ಸುಮಾರು ಏಳು ಗಂಟೆಗಳ ಕಾಲ ನಡೆದಿದ್ದು, ಮತ್ತೆ ಹಂಗಾಮಿ ಅಧ್ಯಕ್ಷರಾಗಿ ಶ್ರೀಮತಿ ಸೋನಿಯಾ ಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಹೊಸ ಅಧ್ಯಕ್ಷರ ನೇಮಕ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆಯಾಗುವುದು ಅಗತ್ಯ ಇದೆ ಎಂದು ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ 23 ಹಿರಿಯ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ವಿಚಾರ ಈ ಸಭೆಯಲ್ಲಿ ಚರ್ಚೆಗೆ ಬಂತು. ಮುಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಸೋನಿಯಾ ಅವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ. ತನಗೆ ಯಾರ ವಿರುದ್ಧವೂ ದ್ವೇಷ ಇಲ್ಲ. ಆದರೆ, ಪಕ್ಷದ ವೇದಿಕೆಯಲ್ಲಿ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಿ ಎಂದು ಹಿರಿಯ ನಾಯಕರಿಗೆ ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಗುಲಾಂ ನಬಿ ಆಜಾದ್, ಚಿದಂಬರಂ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಹೊಸ ಅಧ್ಯಕ್ಷರ ನೇಮಕವಾಗುವವರೆಗೆ ನೀವೇ ಮುಂದುವರಿಯಬೇಕೆಂದು ಸೋನಿಯಾ ಗಾಂಧಿಯವರನ್ನು ಮನಮೋಹನ್ ಸಿಂಗ್ ಒತ್ತಾಯಿಸಿದರು.
0 comments:
Post a Comment