ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ ಎಂದ ಸಿಬಿಐ ವಿಶೇಷ ನ್ಯಾಯಾಲಯ : ಅಡ್ವಾಣಿ ಸಹಿತ ಎಲ್ಲ ಆರೋಪಿಗಳು ಖುಲಾಸೆ - Karavali Times ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ ಎಂದ ಸಿಬಿಐ ವಿಶೇಷ ನ್ಯಾಯಾಲಯ : ಅಡ್ವಾಣಿ ಸಹಿತ ಎಲ್ಲ ಆರೋಪಿಗಳು ಖುಲಾಸೆ - Karavali Times

728x90

30 September 2020

ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ ಎಂದ ಸಿಬಿಐ ವಿಶೇಷ ನ್ಯಾಯಾಲಯ : ಅಡ್ವಾಣಿ ಸಹಿತ ಎಲ್ಲ ಆರೋಪಿಗಳು ಖುಲಾಸೆ



28 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ ನ್ಯಾಯಾಲಯ

ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಎಸ್ ಕೆ ಯಾದವ್


ಲಕ್ನೋ, ಸೆ. 30, 2020 (ಕರಾವಳಿ ಟೈಮ್ಸ್) : ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತವಾಗಿರದೆ ಆಕಸ್ಮಿಕ ಘಟನೆಯಾಗಿತ್ತು ಎಂದು ಅಭಿಪ್ರಾಯಪಟ್ಟ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಸಹಿತ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ಬುಧವಾರ ತೀರ್ಪಿತ್ತಿದೆ. 

28 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಆರೋಪಿಗಳಿಗೆ ಕ್ಲೀನ್ ಚಿಟ್ ದೊರೆತಂತಾಗಿದೆ. ಆರೋಪಿಗಳ ವಿರುದ್ಧ ಪೂರ್ವ ಪ್ರಬಲ ಸಾಕ್ಷಿಗಳಿಲ್ಲ ಎಂದು ನ್ಯಾಯಮೂರ್ತಿ ಎಸ್ ಕೆ ಯಾದವ್ ಈ ತೀರ್ಪು ಪ್ರಕಟಿಸಿದ್ದಾರೆ. 

ತೀರ್ಪು £ೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ. ಸುರೇಂದ್ರ ಕುಮಾರ್ ಯಾದವ್ ಸೆ. 16 ರಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಾಲು ಸಿಂಗ್, ಬಿಬಿ ಶರಣ್ ಸಿಂಗ್ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್ ಕೊಠಡಿಯಲ್ಲಿ ಹಾಜರಿದ್ದರು.

ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತ ಮುತ್ತ ಬ್ಯಾರಿಕೇಡ್ ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟ್ ಇರುವ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿತ್ತು.

2017ರ ಎಪ್ರಿಲ್ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‍ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ 2 ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಎಪ್ರಿಲ್‍ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. 

ಸೆಕ್ಷನ್ 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

ಪ್ರಕರಣದಲ್ಲಿ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್‍ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್ ಅವರುಗಳು ಆರೋಪಿಗಳಾಗಿದ್ದರು. 










  • Blogger Comments
  • Facebook Comments

0 comments:

Post a Comment

Item Reviewed: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ ಎಂದ ಸಿಬಿಐ ವಿಶೇಷ ನ್ಯಾಯಾಲಯ : ಅಡ್ವಾಣಿ ಸಹಿತ ಎಲ್ಲ ಆರೋಪಿಗಳು ಖುಲಾಸೆ Rating: 5 Reviewed By: karavali Times
Scroll to Top