ಬೆಂಗಳೂರು (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 7 ರಿಂದ 19ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ಅಧಿಕೃತ ಆದೇಶ ಹೊರಡಿಸಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣ ಸೀಮಿತವಾಗಿದೆ. ಅಂದರೆ ಪರೀಕ್ಷಾ ಅವಧಿಯಲ್ಲಿ ಮಾತ್ರ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸೇವೆ ಪಡೆಯಬಹುದು.
ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಎಸ್ಸಾರ್ಟಿಸಿ ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದು.
ಇದೇ ವೇಳೆ ಬಿಎಂಸಿಟಿಸಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ನೀಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ನಿಗಮದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಯ ದಿನ ಕಳೆದ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಹಾಗೂ ಪರೀಕ್ಷೆಯ ಪ್ರವೇಶಪತ್ರ ತೋರಿಸಿ ನಿಗಮದ ಬಸ್‍ಗಳಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ನಿಗಮ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಹೀಗಾಗಿ ನಿಗಮವು ಈ ಬಾರಿ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ವಿತರಿಸಿಲ್ಲ. ಈ ನಡುವೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
0 comments:
Post a Comment