ಬೆಂಗಳೂರು, ಡಿ. 24, 2020 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಸರಕಾರ ರಾತ್ರಿ ಕಫ್ರ್ಯೂ ವಿಧಿಸಿ ಬುಧವಾರ ಆದೇಶ ಹೊರಡಿಸಿತ್ತು. ಸರಕಾರದ ದಿಢೀರ್ ನಿರ್ಧಾರಕ್ಕೆ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಬುಧವಾರ ರಾತ್ರಿಯಿಂದ ಜಾರಿಯಾಗಿದ್ದ ರಾತ್ರಿ ಕಫ್ರ್ಯೂವನ್ನು ಒಂದು ದಿನ ಮುಂದೂಡಿ ಗುರುವಾರ ರಾತ್ರಿಯಿಂದ ಜಾರಿ ಎಂದು ಮರು ಆದೇಶ ಹೊರಡಿಸಿತ್ತಲ್ಲದೆ ಕಫ್ರ್ಯೂ ಅವಧಿಯಲ್ಲೂ ಕೊಂಚ ಸಡಿಲಿಕೆ ಮಾಡಿತ್ತು. ಆದರೆ ರಾತ್ರಿ ಕಫ್ರ್ಯೂ ಎಂಬ ಪರಿಕಲ್ಪನೆಯೇ ಸರಿಯಲ್ಲ ಎಂದು ವಿರೋಧ ಪಕ್ಷಗಳು, ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರಕಾರ ಒಂದೇ ದಿನದಲ್ಲಿ ಮತ್ತೆ ತನ್ನ ನಿರ್ಧಾರ ಪರಿಷ್ಕರಿಸಿ ರಾತ್ರಿ ಕಫ್ರ್ಯೂವನ್ನೇ ಸಂಪೂರ್ಣವಾಗಿ ರದ್ದುಪಡಿಸಿ ತೀರ್ಮಾನ ಕೈಗೊಂಡಿದೆ.
ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ ಎಂದು ಸಿಎಂ ಯಡಿಯೂರಪ್ಪ ಅವರ ಕಛೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment