ನವದೆಹಲಿ, ಮೇ 28, 2021 (ಕರಾವಳಿ ಟೈಮ್ಸ್) : ಕೋವಿಡ್ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಸ್ಥಗಿತಗೊಂಡಿರುವ ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ಇದೀಗ ಮತ್ತೆ ಜೂನ್ 30ರವರೆಗೆ ವಿಸ್ತರಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಮಾರ್ಚ್ 25 ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. 2020 ರ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈಯಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ವ್ಯವಸ್ಥೆಗಳಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನ ಯಾನವನ್ನು ಅನುಮತಿಸಲಾಗಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‍ಡಂ, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸುತ್ತಿದೆ.
0 comments:
Post a Comment