ನವದೆಹಲಿ, ಜೂ. 01, 2021 (ಕರಾವಳಿ ಟೈಮ್ಸ್) : ಕೋವಿಡ್ ದ್ವಿತೀಯ ದೇಶದಲ್ಲಿ ವ್ಯಾಪಕ ಆತಂಕ ಸೃಷ್ಟಿಸಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ 12ನೇ ತರಗತಿ ಪರೀಕ್ಷೆ ಕುರಿತಂತೆ ನಿರ್ಣಾಯಕ ಸಭೆ ಬಳಿಕ ಈ ನಿರ್ಧಾರ ಘೋಷಿಸಲಾಗಿದೆ.
ಕೋವಿಡ್ ಕಾರಣದಿಂದ ಅನಿಶ್ಚಿತ ಪರಿಸ್ಥಿತಿ ಹಿನ್ನಲೆಯಲ್ಲಿ ಮತ್ತು ವಿವಿಧ ಭಾಗೀದಾರರ ಅಭಿಪ್ರಾಯಗಳನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ಮಾಧ್ಯಮಗಳಿಗೆ ತಿಳಿಸಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಆತಂಕ ಇನ್ನೂ ದೂರವಾಗಿಲ್ಲ. ಕೆಲ ರಾಜ್ಯಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದೆ. ಪೋಷಕರು ಮತ್ತು ಶಿಕ್ಷಕರು ಸ್ವಾಭಾವಿಕವಾಗಿ ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆಗೆ ಕಳುಹಿಸುವುದು ಸೂಕ್ತವಲ್ಲ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.
ಕಳೆದ ವರ್ಷದಂತೆ, ಪರೀಕ್ಷೆಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳು ಇಚ್ಛಿಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಸಿಬಿಎಸ್ಇ ಇಂತಹ ಆಯ್ಕೆಯನ್ನು ಪರಿಗಣಿಸಲು ಸಹ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ಈ ಹಿಂದೆಯೇ ಸರಕಾರ ರದ್ದುಪಡಿಸಿ ಆದೇಶಿಸಿದೆ.
"ಭಾರತ ಸರ್ಕಾರವು ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ವ್ಯಾಪಕ ಸಮಾಲೋಚನೆಯ ನಂತರ, ನಾವು ವಿದ್ಯಾರ್ಥಿ-ಸ್ನೇಹಿಯಾಗಿರುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಅದು ವಿದ್ಯಾರ್ಥಿಗಳ ಆರೋಗ್ಯ ಮತ್ತು ನಮ್ಮ ಯುವ ಭವಿಷ್ಯದ ರಕ್ಷಣೆ ದೃಷ್ಟಿಯಿಂದಾಗಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ರಾಜ್‍ನಾಥ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಕೊರೊನಾ ನಂತರದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಭೆಯಲ್ಲಿ ಭಾಗವಹಿಸಿಲ್ಲ.
ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸರಕಾರ ಜೂನ್ 3ರೊಳಗೆ ಸುಪ್ರೀಂ ಕೋರ್ಟ್‍ಗೆ ಪ್ರತಿಕ್ರಿಯೆ ನೀಡಲಿದೆ. ಹೀಗಾಗಿ ಇಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರೀಕ್ಷೆ ನಡೆಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ರದ್ದುಪಡಿಸುವ ನಿರ್ಧಾರಕ್ಕೆ ಬರಲಾಗಿದೆ.
ಪರೀಕ್ಷೆ ರದ್ದುಗೊಳಿಸುವ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 3ರಂದು ವಿಚಾರಣೆ ನಡೆಸಲಿದೆ. ಈ ವೇಳೆ ಪರೀಕ್ಷೆ ರದ್ದು ಕುರಿತು ಕೇಂದ್ರ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಇಂದು ಈ ಬಗ್ಗೆ ಸಭೆ ನಡೆಸಿದ್ದಾರೆ.
0 comments:
Post a Comment