ದಕ್ಷಿಣ ಕನ್ನಡ ಸಹಿತ 8 ಜಿಲ್ಲೆಗಳ ಡೀಸಿಗಳೊಂದಿಗೆ ಸಿಎಂ ವೀಡಿಯೋ ಕಾನ್ಫರೆನ್ಸ್ : ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಕ್ಕೆ ಸೂಚನೆ - Karavali Times ದಕ್ಷಿಣ ಕನ್ನಡ ಸಹಿತ 8 ಜಿಲ್ಲೆಗಳ ಡೀಸಿಗಳೊಂದಿಗೆ ಸಿಎಂ ವೀಡಿಯೋ ಕಾನ್ಫರೆನ್ಸ್ : ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಕ್ಕೆ ಸೂಚನೆ - Karavali Times

728x90

10 June 2021

ದಕ್ಷಿಣ ಕನ್ನಡ ಸಹಿತ 8 ಜಿಲ್ಲೆಗಳ ಡೀಸಿಗಳೊಂದಿಗೆ ಸಿಎಂ ವೀಡಿಯೋ ಕಾನ್ಫರೆನ್ಸ್ : ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಕ್ಕೆ ಸೂಚನೆ

ಬೆಂಗಳೂರು, ಜೂನ್ 10, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಸಹಿತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ 8 ಜಿಲ್ಲೆಗಳ ಡೀಸಿಗಳೊಂದಿಗೆ ಸಿಎಂ ಯಡಿಯೂರಪ್ಪ ಅವರು ಗುರುವಾರ ವೀಡಿಯೊ ಕಾನ್ಫರೆನ್ಸ್ ನಡೆಸಿ ಚರ್ಚೆ ನಡೆಸಿದರು. 

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಮೈಸೂರು, ಹಾಸನ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿಗಳು ಸುಮಾರು 65 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿರುವುದರಿಂದ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ವಹಿಸುವಂತೆ ಸೂಚಿಸಿದರು. 

ರಾಜ್ಯದಲ್ಲಿ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳಿಂದಾಗಿ ಪಾಸಿಟಿವಿಟಿ ಪ್ರಕರಣಗಳು ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದರೂ ಈ ಎಂಟು ಜಿಲ್ಲೆಗಳಲ್ಲಿ ನಿರೀಕ್ಷಿತ ಬೆಳವಣಿಗೆ ಕಂಡು ಬರುತ್ತಿಲ್ಲ. ಅಲ್ಲದೆ ಈ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಿಎಂ ತೀವ್ರ ಕಳವಳ ವ್ಯಕ್ತಪಡಿಸಿದರು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಅತಿ ಹೆಚ್ಚು ಅಂದರೆ, ಸರಾಸರಿ ಶೇಕಡಾ 25.17 ಪಾಸಿಟಿವಿಟಿ ದರ ದಾಖಲಾಗಿದೆ. ಮೈಸೂರಿನಲ್ಲಿಯೂ ಶೇಕಡಾ 22 ರಷ್ಟಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ 6.1 ಸಂಪರ್ಕಿತರನ್ನು ಪತ್ತೆಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ 19 ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವುದನ್ನು ಖಾತರಿ ಪಡಿಸಬೇಕು. ಜನರು ನಿರ್ಬಂಧಗಳನ್ನು ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಮೈಕ್ರೋ ಕಂಟೇನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಒತ್ತು ನೀಡಬೇಕು. ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾಗುವಂತೆ ಮಾಡಿ ಪಾಸಿಟಿವಿಟಿ ರೇಟ್ ಶೇಕಡಾ 5ರ ಒಳಗಿರುವಂತೆ ಖಾತರಿ ಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಬೆಳಗಾವಿ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಜಾಸ್ತಿ ಮಾಡಲಾಗುತ್ತಿದ್ದು, ಸರ್ಕಾರದ  ಮಾರ್ಗ ಸೂಚಿಯಂತೆ ಶೇ. 30 ರಷ್ಟು ನಡೆಸಲು ಸೂಚಿಸಲಾಯಿತು. ಉಳಿದ ಶೇ. 70 ರಷ್ಟು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಬೇಕು. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ವರದಿ 24 ಗಂಟೆಗಳ ಒಳಗೆ ನೀಡಬೇಕು, ಸೋಂಕಿತರ ಆರೋಗ್ಯ ಸ್ಥಿತಿಗನುಗುಣವಾಗಿ ವರ್ಗೀಕರಣ ಮಾಡುವ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು. ಮೈಸೂರು ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ತೀವ್ರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಬೇಕು, ಎಲ್ಲ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಸೂಚಿಸಿದರು.

ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಸಹಿತ 8 ಜಿಲ್ಲೆಗಳ ಡೀಸಿಗಳೊಂದಿಗೆ ಸಿಎಂ ವೀಡಿಯೋ ಕಾನ್ಫರೆನ್ಸ್ : ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಕ್ಕೆ ಸೂಚನೆ Rating: 5 Reviewed By: karavali Times
Scroll to Top