ಬೆಂಗಳೂರು, ಜುಲೈ 12, 2021 (ಕರಾವಳಿ ಟೈಮ್ಸ್) : 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ಮೂಲಕ ಜುಲೈ 19 ಹಾಗೂ 22 ರಂದು ನಡೆಯುವ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಬಾಧಿತವಾಗಿದೆ.
ಕೊರೋನಾ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಎಸ್ ವಿ ಸಿಂಗ್ರೇ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ವಜಾಗೊಳಿಸಿದೆ.
ಎರಡು ದಿನಗಳ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಸರಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಒಂದು ತರಗತಿಯಲ್ಲಿ ಕೇವಲ 12 ವಿದ್ಯಾರ್ಥಿಗಳನ್ನು ಕೂರಿಸಲಿದ್ದು, ಒಬ್ಬ ವಿದ್ಯಾರ್ಥಿಗೆ ಒಂದು ಮೇಜು, ಸಾಮಾಜಿಕ ಅಂತರವಿರಲಿದ್ದು ಆರೋಗ್ಯ ತಪಾಸಣೆಗಾಗಿ 2 ಅರೆ ವೈದ್ಯಕೀಯ ಸಿಬ್ಬಂದಿ ಇರುತ್ತಾರೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ರಾಜ್ಯ ಸರಕಾರದ ಪರ ವಾದವನ್ನು ಆಲಿಸಿದ ನ್ಯಾಯಾಲಯ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ನ್ಯಾಯಾಲಯವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಒಲವು ತೋರುತ್ತಿಲ್ಲ. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಎಲ್ಲಾ ಮಧ್ಯಸ್ಥಗಾರರಿಂದ ಪಾಲಿಸಬೇಕಾದ ಎಸ್‍ಒಪಿ ಅನ್ನು ಸುತ್ತೋಲೆ ರೂಪದಲ್ಲಿ ನೀಡುವ ಮೂಲಕ ಪರೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ಕಾಳಜಿ ವಹಿಸಿದೆ ಎಂದು ನಾವು ಕಂಡುಕೊಂಡಿದ್ದೇವೆ. ಅರ್ಜಿಯಲ್ಲಿ ನಮಗೆ ಯಾವ ಗಮನಾರ್ಹ ಅಂಶಗಳು ಕಂಡುಬಂದಿಲ್ಲ. ಆದ್ದರಿಂದ, ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಕೆಲವು ಸಂಸ್ಥೆಗಳಲ್ಲಿ ಆನ್‍ಲೈನ್ ತರಗತಿಗಳನ್ನು ಸರಿಯಾಗಿ ನಡೆಸಿಲ್ಲ ಮತ್ತು ಅನೇಕ ಮಕ್ಕಳು ಆನ್‍ಲೈನ್ ತರಗತಿಗಳ ಮೂಲಕ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ವಾದಿಸಿದ್ದರು.
0 comments:
Post a Comment