ಬೆಂಗಳೂರು, ಜುಲೈ 17, 2021 (ಕರಾವಳಿ ಟೈಮ್ಸ್) : ಬಕ್ರೀದ್ ಹಬ್ಬದ ಪ್ರಯುಕ್ತ ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವ ಹಿನ್ನಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಶುಕ್ರವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಆರ್ಥಾತ್ ಈದುಲ್ ಅಝ್ಹಾ ಜುಲೈ 21 ರಂದು ಬುಧವಾರ ಆಚರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಆದೇಶದಂತೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ. ಮಸೀದಿಗಳಲ್ಲಿ ಒಂದು ಬಾರಿ 50 ಮಂದಿ ಮಾತ್ರ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಕೋವಿಡ್-19 ಅನ್‍ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆ ತಡೆಗಟ್ಟಲು ಹೆಚ್ಚಿನ ಜಾಗರೂಕತೆ ಅನುಸರಿಸುವ ಅನಿವಾರ್ಯತೆ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಟ್ಟು ಗೂಡುವುದನ್ನು ಸರಕಾರ ನಿಷೇಧಿಸಿದೆ.
ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಮಾಝ್ ಸಂದರ್ಭ ಕನಿಷ್ಠ 6 ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು ಎಂದು ವಕ್ಫ್ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಾರ್ಥನೆಗೆ ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನ ಪರೀಕ್ಷಿಸಬೇಕು. ಕೈಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್ ಬಳಸಿ ಸ್ವಚ್ಛಗೊಳಿಸಿಕೊಳ್ಳಬೇಕು. ಪ್ರಾರ್ಥನೆ ಮಾಡಲು ಬಳಸುವ ಮುಸಲ್ಲಾ (ಪ್ರಾರ್ಥನಾ ವಸ್ತ್ರ) ಮನೆಯಿಂದಲೇ ತರುವಂತೆ ಸೂಚಿಸಬೇಕು. ವ್ಯಕ್ತಿಗಳು ಪರಸ್ಪರ ಆಲಿಂಗನ ಅಥವಾ ಹಸ್ತಲಾಘವಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.
ಈ ಹಬ್ಬದಲ್ಲಿ ಪ್ರಾಣಿ ವಧೆ ಮಾಡುವ ವಿಶೇಷ ಸಂಪ್ರದಾಯ ಇದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ರಸ್ತೆಗಳು, ಪಾದಚಾರಿ ಮಾರ್ಗಗಳು, ಆಸ್ಪತ್ರೆಗಳ ಆವರಣಗಳು, ನರ್ಸಿಂಗ್ ಹೋಂಗಳ ಒಳ ಮತ್ತು ಹೊರಾಂಗಣಗಳು, ಶಾಲಾ-ಕಾಲೇಜುಗಳ ಒಳಾಂಗಣ ಮತ್ತು ಹೊರಾಂಗಣ, ಆಟದ ಮೈದಾನ, ಮಸೀದಿ ಮತ್ತು ಇತರೆ ಧಾರ್ಮಿಕ ಸ್ಥಳಗಳು, ಉದ್ಯಾನದ ಒಳಗೆ, ಹೊರಗೆ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿವಧೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
0 comments:
Post a Comment