ಬೆಂಗಳೂರು, ಎಪ್ರಿಲ್ 12, 2022 (ಕರಾವಳಿ ಟೈಮ್ಸ್) : ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಹಾಗೂ ಡೆತ್ ನೋಟ್ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನೇರ ಕಾರಣರಾಗಿರುವ ಈಶ್ವರಪ್ಪ ವಿರುದ್ಧ ಹತ್ಯೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದು, ಆಗ್ರಹಕ್ಕೆ ಸರಕಾರ ಸೊಪ್ಪು ಹಾಕದಿದ್ದರೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವಿಷಯ ಹೊರಬರುತ್ತಿದ್ದಂತೆ ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು, ಸಿಎಂ ಬೊಮ್ಮಾಯಿ ಅವರು ಸಂಪುಟದಿಂದ ವಜಾ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಇದು ಕೊಲೆ ಎಂಬುದು ಗೊತ್ತಿದೆ. ಸಚಿವ ಈಶ್ವರಪ್ಪ ವಿರುದ್ಧ ಮಾಡಿದ್ದ ಆರೋಪಕ್ಕೆ ಸಂತೋಷ್ ಪಾಟೀಲ್ ಬಲಿಯಾಗಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302ರಡಿಯಲ್ಲಿ ಕೇಸು ದಾಖಲಿಸಿ ಬಂಧಿಸಬೇಕು ಎಂದು ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ ತಮ್ಮದೇ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರನ್ನೂ ಬಿಟ್ಟಿಲ್ಲ, ಆತ್ಮಹತ್ಯೆ ಪತ್ರದಲ್ಲಿ ಸಚಿವರ ಹೆಸರಿದೆ. ಈ ಕಾರಣಕ್ಕಾಗಿ ಈಶ್ವರಪ್ಪನವರನ್ನು ತಡಮಾಡದೆ ಬಂಧಿಸಬೇಕು. ಇಲ್ಲವಾದಲ್ಲಿ ಸಿಎಂ ಮನೆಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಹೇಳಿದ್ದಾರೆ.
ಕೆಎಸ್ ಈಶ್ವರಪ್ಪ ಅವರೇ ಸಂತೋಷ್ ಪಾಟೀಲ್ ಸಾವಿಗೆ ಸಂಪೂರ್ಣ ಹೊಣೆಗಾರರಾಗಿದ್ದು, ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿ ಕೇಸು ದಾಖಲಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
0 comments:
Post a Comment