ಮಂಗಳೂರು, ಜುಲೈ 08, 2022 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಎಲರ್ಟ್ ಪರಿಗಣಿಸಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯ ಹಿನ್ನಲೆಯಲ್ಲಿ ರಜೆ ಘೋಷಿಸುತ್ತಿದ್ದರೂ ಜಿಲ್ಲೆಯ ಯಾವುದೇ ಇಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಡೀಸಿ ಆದೇಶ ಪಾಲಿಸದೆ ಇರುವ ಬಗ್ಗೆ ವಿದ್ಯಾರ್ಥಿಗಳು ದೂರಿಕೊಂಡ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜು ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು £ರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆ ಅಧ್ಯಕ್ಷತೆ ವಹಿಸಿ ಅವರು ಈ ಎಚ್ಚರಿಕೆ ರವಾನಿಸಿದ್ದಾರೆ.
ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು. ಅವರು ಹಳ್ಳಿ, ಹಾಸ್ಟೆಲುಗಳಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು. ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು. ಜಿಲ್ಲಾಡಳಿತ ಒಂದು ಬಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ. ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ತಾಕೀತು ಮಾಡಿದರು.
ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಭಾಗವಹಿಸಿದ್ದರು.
0 comments:
Post a Comment