ಬಂಟ್ವಾಳ, ಆಗಸ್ಟ್ 16, 2022 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರ ಸಮ್ಮುಖದಲ್ಲೇ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಎಸಗಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಸಾರ್ವಜನಿಕರು ಹಾಗೂ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಧ್ವಜಸ್ಥಂಭದಲ್ಲಿ ಧ್ವಜಾರೋಹಣಕ್ಕೆ ಏರಿದ ಗಣ್ಯ ವ್ಯಕ್ತಿಗಳ ಕಾಲ ಬುಡದಲ್ಲಿ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕುರ್ಚಿ ಇಟ್ಟು ಅಳವಡಿಸಿರುವುದೇ ಈ ಆರೋಪಕ್ಕೆ ಕಾರಣವಾಗಿದೆ. ಈ ಆವಾಂತರಕ್ಕೆ ಕಾರ್ಯಕ್ರಮ ಆಯೋಜಿಸಿದ ತಹಶೀಲ್ದಾರ್ ನೇತೃತ್ವದ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯೇ ನೇರ ಜವಾಬ್ದಾರಿಯಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ರಾಜೇಶ್ ನಾಯಕ್ ಅವರು ಕೂಡಾ ಈ ಬಗ್ಗೆ ಯಾವುದೇ ಪ್ರತಿಕ್ರಯೆ ನೀಡದೆ ಇದ್ದುದೂ ಕೂಡಾ ಆಕ್ರೋಶಕ್ಕೆ ಕಾರಣವಾಗಿದೆ.
ಕಾರ್ಯಕ್ರಮ ಆಯೋಜನಾ ಸಮಿತಿಯ ಈ ಬೇಜವಾಬ್ದಾರಿ ನಡೆಯನ್ನು ಬಂಟ್ವಾಳ ತಾಲೂಕು ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ (ರಿ) ಜೋಡುಮಾರ್ಗ ಇದರ ಅಧ್ಯಕ್ಷ ಕೆ ಸತೀಶ್ ಅರಳ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಶಾಸಕರು ಈ ಬಗ್ಗೆ ತಮ್ಮ ಬದ್ದತೆಯನ್ನು ಸ್ಪಷ್ಟಪಡಿಸುವುದರ ಜೊತೆಗೆ ಸಮಿತಿಯ ಪ್ರಮುಖರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
0 comments:
Post a Comment