ಬಂಟ್ವಾಳ, ಅಕ್ಟೋಬರ್ 29, 2022 (ಕರಾವಳಿ ಟೈಮ್ಸ್) : ತಾಲೂಕಿನ ಸೂರಿಕುಮೇರಿನಲ್ಲಿ ಶುಕ್ರವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಪಾಣೆಮಂಗಳೂರು ಸಮೀಪದ ನರಿಕೊಂಬು ಗ್ರಾಮದ ಉಪ್ಪುಗುಡ್ಡೆ ನಿವಾಸಿ, ಜವುಳಿ ವ್ಯಾಪಾರಸ್ಥ ಅಬ್ದುಲ್ ಖಾದರ್ ಅವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶುಕ್ರವಾರ ಸಂಜೆ ಪುತ್ತೂರು ಪೇಟೆಯಿಂದ ಬಟ್ಟೆ ಖರೀದಿಸಿ ದ್ವಿಚಕ್ರ ವಾಹನದಲ್ಲಿ ವಾಪಸ್ಸು ಬರುತ್ತಿದ್ದ ವೇಳೆ ಸೂರಿಕುಮೇರಿನಲ್ಲಿ ರಸ್ತೆ ಕಾಮಗಾರಿ ವೇಳೆ ಸುರಿದ ನೀರಿನಿಂದಾಗಿ ಸ್ಕೂಟರ್ ಸ್ಕಿಡ್ ಆಗಿ ಈ ಅವಘಡ ಸಂಭವಿಸಿದ್ದು, ಸಹಸವಾರರಾಗಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದರ್ ಅವರು ರಸ್ತೆಗೆಸೆಯಲ್ಟಟ್ಟು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ ವೇಳೆಗೆ ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ಬಳಿಕ ಮಧ್ಯಾಹ್ನದ ವೇಳೆಗೆ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಆಲಡ್ಕ ಬದ್ರಿಯಾ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನೆರವೇರಿಸಲಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment