ಸಾಮಾಜಿಕ ತಾಣಗಳ ಮೂಲಕ ಶಾಂತಿ ಕದಡುವವರ ಹೆಡೆಮುರಿ ಕಟ್ಟಿ : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು - Karavali Times ಸಾಮಾಜಿಕ ತಾಣಗಳ ಮೂಲಕ ಶಾಂತಿ ಕದಡುವವರ ಹೆಡೆಮುರಿ ಕಟ್ಟಿ : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು - Karavali Times

728x90

23 May 2023

ಸಾಮಾಜಿಕ ತಾಣಗಳ ಮೂಲಕ ಶಾಂತಿ ಕದಡುವವರ ಹೆಡೆಮುರಿ ಕಟ್ಟಿ : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಅಧಿಕಾರ ಪದಗ್ರಹಣ ಬಳಿಕ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಎಂ, ಡಿಸಿಎಂ


ಬೆಂಗಳೂರು, ಮೇ 23, 2023 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೊಸ್ಟ್‍ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹವರ ವಿರುದ್ದ ಸುಮೋಟೋ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ (ಮೇ 23) ನಡೆದ  ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದ ಸಿಎಂ ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು. 

ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‍ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಇದೇ ವೇಳೆ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‍ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬಿ ಝಡ್ ಝಮೀರ್ ಅಹ್ಮದ್ ಖಾನ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸಾಮಾಜಿಕ ತಾಣಗಳ ಮೂಲಕ ಶಾಂತಿ ಕದಡುವವರ ಹೆಡೆಮುರಿ ಕಟ್ಟಿ : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು Rating: 5 Reviewed By: karavali Times
Scroll to Top