ಬೆಂಗಳೂರು, ಜೂನ್ 07, 2023 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಜೂನ್ 12 ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್.ಆರ್.ಟಿ.ಸಿ.) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‍ಗಳಲ್ಲಿ ಉಚಿತ ಪ್ರಯಾಣ ಸೇವೆಯನ್ನು ನೀಡಲು ಆದೇಶಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‍ಗಳು ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗಲು ಉಚಿತವಾಗಿ ಬಸ್ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುವಾಗ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು (ಹಾಲ್ ಟಿಕೆಟ್) ತೋರಿಸಿ, ಸಾರಿಗೆ ಸಂಸ್ಥೆಯ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿವೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಜೂನ್ 12 ರಿಂದ ಜೂನ್ 19ರ ವರಗೆ ನಡೆಸುತ್ತಿದೆ. ಇದಕ್ಕೆ ಸಕಲ ಸಿದ್ಧತೆಯನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.
ಈ ಬಾರಿಯ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ವೇಳಾಪಟ್ಟಿ
ಜೂನ್ 12 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿ ಇ ಆರ್ ಟಿ), ಸಂಸ್ಕೃತ
ಜೂನ್ 13 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ
ಜೂನ್ 14 ರಂದು ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 15 ರಂದು ಸಮಾಜ ವಿಜ್ಞಾನ
ಜೂನ್ 16 ರಂದು ತೃತೀಯ ಭಾಷೆ : ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ ಎಸ್ ಕ್ಯು ಎಫ್ ಪರೀಕ್ಷೆಯ ವಿಷಯಗಳು (ಐಟಿ, ಆಟೋಮೊಬೈಲ್, ಆರೋಗ್ಯ, ಸೌಂದರ್ಯ ಮತ್ತು ಸ್ವಾಸ್ಥ್ಯ)
ಜೂನ್ 17 ರಂದು ಗಣಿತ/ ಸಮಾಜಶಾಸ್ತ್ರ
ಜೂನ್ 19 ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.
0 comments:
Post a Comment