ನೋಂದಾವಣೆಗೆ ಆಗಸ್ಟ್ 10 ಕೊನೆ ದಿನಾಂಕ : ಆಗಸ್ಟ್ 21 ರಿಂದ 2ರವರೆಗೆ ಪೂರಕ ಪರೀಕ್ಷೆ
ಬೆಂಗಳೂರು, ಜುಲೈ 29, 2023 (ಕರಾವಳಿ ಟೈಮ್ಸ್) : ನೂತನ ಸರಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಯಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆ ನಡೆಸುವ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಪರೀಕ್ಷಾ ವೇಳಾಪಟ್ಟಿಯನ್ನೂ ಸಿದ್ದಪಡಿಸಲಾಗಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2ನೇ ಪೂರಕ ಪರೀಕ್ಷೆ ನಡೆಸುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ದ್ವಿತೀಯ ಪೂರಕ ಪರೀಕ್ಷೆಯಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ತಮ್ಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ವರ್ಷವಿಡೀ ವ್ಯರ್ಥವಾಗುವ ಸಂದರ್ಭ ತಪ್ಪಲಿದೆ. ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಇದೀಗ ಸಚಿವರ ಹೇಳಿಕೆ ಪೂರ್ಣ ರೂಪದಲ್ಲಿ ಕಾರ್ಯರೂಪಕ್ಕೆ ಬಂದಿದ್ದು, 2022-23ನೇ ಸಾಲಿನ ಹಾಗೂ ಅದಕ್ಕೂ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿ ವಿಶೇಷ ಪೂರಕ ಪರೀಕ್ಷೆಗೆ ಎಲ್ಲ ಸಿದ್ದತೆ ಮಾಡಿಕೊಂಡು ಆ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಮಾತ್ರವಲ್ಲ 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ದಪಡಿಸಿ ಪ್ರಕಟಣೆ ಹೊರಡಿಸಿದೆ. ಮಂಡಳಿಯ ಪ್ರಕಟನೆಯಂತೆ ಆಗಸ್ಟ್ 21 ರಿಂದ ಸೆಪ್ಟಂಬರ್ 2ರ ವರೆಗೆ ವಿಶೇಷ ಪೂರಕ ಪರೀಕ್ಷೆ ನಡೆಯಲಿದೆ.
ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಕಾಲೇಜನ್ನು ಸಂಪರ್ಕಿಸಿ ಪ್ರಾಂಶುಪಾಲರ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜುಲೈ 28ರಿಂದ ಈ ಬಗ್ಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆಗಸ್ಟ್ 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಥಮ ಬಾರಿಗೆ ವಿಶೇಷ ಪೂರಕ ಪರೀಕ್ಷೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳುವಂತೆ ಇಲಾಖೆ ಕೋರಿಕೊಂಡಿದೆ. ವಿಶೇಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶ ತಿರಸ್ಕರಿಸುವಂತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ ಸೈಟನ್ನು ಪರಿಶೀಲಿಸಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ.
0 comments:
Post a Comment