“ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಬೆಂಗಳೂರಿನಲ್ಲಿ ಸಿಎಂ ಚಾಲನೆ
ಬೆಂಗಳೂರು, ಜುಲೈ 10, 2023 (ಕರಾವಳಿ ಟೈಮ್ಸ್) : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ.ಗೆ 34 ರೂಪಾಯಿ ನಮ್ಮಿಂದ ತೆಗೆದುಕೊಳ್ಳುತ್ತಿದ್ದರು. ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ? ಎಂದು ಪ್ರಶ್ನಿಸಿದರು.
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂಪಾಯಿ ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ ಎಂದು ಕಿಡಿ ಕಾರಿದ ಸಿಎಂ ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
0 comments:
Post a Comment