ಮಂಗಳೂರು, ಜುಲೈ 04, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ ಮಳೆ ಬಿರುಸು ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರವೂ (ಜುಲೈ 5) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಂಗಳವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಬುಧವಾರವೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಇರುವ ಹಿನ್ನಲೆಯಲ್ಲಿ ರೆಡ್ ಎಲರ್ಟ್ ಘೋಷಿಸಲಾಗಿದ್ದು, ಶಾಲಾ ಮಕ್ಕಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಹಾಗೂ ನೀರಿನ ಮೂಲಗಳ ತೀರಕ್ಕೆ ತೆರಳದಂತೆ ಪೋಷಕರು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಜಿಲ್ಲಾಡಳಿತ ವಿವಿಧ ಪ್ರದೇಶಗಳಿಗೆ ನೇಮಕಗೊಳಿಸಲಾದ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕಿನಲ್ಲಿ ಕಾಳಜಿ ಕೇಂದ್ರ ತೆರೆದು ಸದಾ ಸನ್ನದ್ದ ಸ್ಥಿತಿಯಲ್ಲಿರುವುದು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತುರ್ತು ಸೇವೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ ಸಂಖ್ಯೆ 10777 ಅಥವಾ 0824-2442590 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಘೋಷಿಸಿದ ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment