ಮಂಗಳೂರು, ಜುಲೈ 18, 2023 (ಕರಾವಳಿ ಟೈಮ್ಸ್) : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಕರ್ನಾಟಕ ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಉಮ್ಮನ್ ಚಾಂಡಿ ಅವರ ನಿಧನದ ಸುದ್ದಿ ನೋವು ತಂದಿದೆ. ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದ ಅವರು ಎರಡು ಬಾರಿ ಕೇರಳದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿ, ಜನರ ಕಲ್ಯಾಣಕ್ಕಾಗಿ ಶ್ರಮಿಸಿದ್ದರು.ಅವರ ನಿಧನವು ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ನೀಡಲಿ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಲೀಂ ಅಹ್ಮದ್ ಅವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಾಂಡಿ ನಿಧನಕ್ಕೆ ಸಂತಾಪ ಸೂಚಿಸಿರುವ ಬಿ ರಮಾನಾಥ ರೈ ಅವರು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದೆ. ಕಾಂಗ್ರೆಸ್ ಪಕ್ಷ ಓರ್ವ ಹಿರಿಯ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ದುಃಖತಪ್ತ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆ ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದವರು ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment