ಅಥಣಿ ಕ್ಷೇತ್ರದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿದ ಸಿಎಂ
ಬೆಂಗಳೂರು, ಆಗಸ್ಟ್ 11, 2023 (ಕರಾವಳಿ ಟೈಮ್ಸ್) : ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ 11) ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಶುವೈದ್ಯಕೀಯ ಮಹಾವಿದ್ಯಾಲಯದ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದರು.
ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಒಟ್ಟು ಪ್ರಯಾಣಿಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿರುವುದರಿಂದ ಸರಕಾರದ ಆದಾಯ ಕೂಡ ಹೆಚ್ಚಾಗಲಿದೆ. ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ. ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದ ಸಿಎಂ ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ. ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು.
ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದು ಸಂತಸ ವ್ಯಕ್ತಪಡಿಸಿದರು.
ಕಳೆದ ಬಾರಿ 165 ಭರವಸೆಗಳ ಪೈಕಿ 158 ಭರವಸೆಯನ್ನು ಈಡೇರಿಸಿದ್ದೆವು. ಅದೇ ರೀತಿ ಈ ಬಾರಿ ನೀಡಲಾಗಿರುವ ಐದು ಗ್ಯಾರಂಟಿಗಳು, ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ. ಎಂದ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮಿ ಈ ತಿಂಗಳಲ್ಲೇ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು ಎಂದರು.
ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. 2013ರಲ್ಲಿ ಬಸವ ಜಯಂತಿಯ ದಿನವೇ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಆದ್ದರಿಂದ ಜನರು ಮತ್ತೆ ಈ ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದ ಸಿಎಂ ಸಿದ್ದು, ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.
ಅಥಣಿ ಮತ ಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರ ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
0 comments:
Post a Comment