ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿ ಮಾಡಿ ಎಂದು ಹಠಕ್ಕೆ ಬಿದ್ದಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ಗ್ಯಾರಂಟಿ ವಿರೋಧಿಸಲು ಸಲಹೆ ನೀಡಿ : ಗ್ಯಾರಂಟಿ ಯೋಜನೆ ವಿಮರ್ಶಿಸುತ್ತಿರುವ ಪ್ರಧಾನಿ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ - Karavali Times ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿ ಮಾಡಿ ಎಂದು ಹಠಕ್ಕೆ ಬಿದ್ದಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ಗ್ಯಾರಂಟಿ ವಿರೋಧಿಸಲು ಸಲಹೆ ನೀಡಿ : ಗ್ಯಾರಂಟಿ ಯೋಜನೆ ವಿಮರ್ಶಿಸುತ್ತಿರುವ ಪ್ರಧಾನಿ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ - Karavali Times

728x90

2 August 2023

ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿ ಮಾಡಿ ಎಂದು ಹಠಕ್ಕೆ ಬಿದ್ದಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ಗ್ಯಾರಂಟಿ ವಿರೋಧಿಸಲು ಸಲಹೆ ನೀಡಿ : ಗ್ಯಾರಂಟಿ ಯೋಜನೆ ವಿಮರ್ಶಿಸುತ್ತಿರುವ ಪ್ರಧಾನಿ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 02, 2023 (ಕರಾವಳಿ ಟೈಮ್ಸ್) : ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊAಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆ ಬಗ್ಗೆ ವಿಮರ್ಶೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆದಿದ್ದಾರೆ. 



ಇಲ್ಲಿ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆ ಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ಎಂದವರು ಪ್ರಶ್ನಿಸಿದ್ದಾರೆ. 

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣು ಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ? ಕೇಂದ್ರ ಸರಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ?

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರಕಾರ ಅಂದಾಜು 1.25 ಲಕ್ಷ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ ಎಂದು ಸಿಎಂ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. 

ಡಬಲ್ ಎಂಜಿನ್ ಸರಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈ ಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಎಂದು ಸಿದ್ದರಾಮಯ್ಯ ಸಾರಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿ ಮಾಡಿ ಎಂದು ಹಠಕ್ಕೆ ಬಿದ್ದಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ಗ್ಯಾರಂಟಿ ವಿರೋಧಿಸಲು ಸಲಹೆ ನೀಡಿ : ಗ್ಯಾರಂಟಿ ಯೋಜನೆ ವಿಮರ್ಶಿಸುತ್ತಿರುವ ಪ್ರಧಾನಿ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top