ಇಂದಿನಿಂದ ಎಲ್ಲ ಸರಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆ : ಸಿಎಂ ಸಿದ್ದರಾಮಯ್ಯ ಘೋಷಣೆ - Karavali Times ಇಂದಿನಿಂದ ಎಲ್ಲ ಸರಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆ : ಸಿಎಂ ಸಿದ್ದರಾಮಯ್ಯ ಘೋಷಣೆ - Karavali Times

728x90

1 November 2023

ಇಂದಿನಿಂದ ಎಲ್ಲ ಸರಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನವೆಂಬರ್ 01, 2023 (ಕರಾವಳಿ ಟೈಮ್ಸ್) : ಇಂದಿನಿಂದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಒದಗಿಸಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದ ಅವರು, ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು. 

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು. 

ಕೇಂದ್ರ ಸರಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದ ಸಿಎಂ ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದರು. 

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರಕಾರದ ಆದ್ಯತೆಯಾಗಿದೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೆÇೀಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಇಂದಿನಿಂದ ಎಲ್ಲ ಸರಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆ : ಸಿಎಂ ಸಿದ್ದರಾಮಯ್ಯ ಘೋಷಣೆ Rating: 5 Reviewed By: karavali Times
Scroll to Top