ಸರಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಉದ್ಘಾಟನೆ
ಬೆಂಗಳೂರು, ಡಿಸೆಂಬರ್ 26, 2023 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ಮಹತ್ವದ ಐತಿಹಾಸಿಕ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ (ಡಿ 26) ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರಕಾರ ಜನತೆಗೆ ನೀಡಿದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿ ಜಾರಿಯಾದರೆ ರಾಜ್ಯ ಸರಕಾರ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಸುಳ್ಳಾಗಿದೆ ಎಂದು ಕಟಕಿಯಾಡಿದರು.
ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ? ನೀವು ಮಾತಿಗೆ ತಪ್ಪಿದ ಮೋದಿ ಆಗಿದ್ದೀರಿ ಎಂದು ಕಾಲೆಳೆದ ಸಿದ್ದರಾಮಯ್ಯ ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ. ಮೋದಿಯವರೇನು ಆರ್ಥಿಕ ತಜ್ಞರಾ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಭಾಷಣ ಮಾಡಿದ್ರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ಸವಾಲೆಸೆದರು.
ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸುತ್ತೇವೆ. ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು? ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ ಎಂದು ಸಿಎಂ 2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ. ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪೆÇ್ಲೀಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ ಉದ್ಯೋಗ ದೊರೆಯದೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಕರ್ನಾಟಕದಲ್ಲಿ ವಾಸವಿರುವವರು, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರಿಗೆ ಈ ಯೋಜನೆ ಅನ್ವಯವಾಗಲಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇಂದಿನಿಂದ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ, ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು.
0 comments:
Post a Comment