ಬಂಟ್ವಾಳ, ಡಿಸೆಂಬರ್ 29, 2023 (ಕರಾವಳಿ ಟೈಮ್ಸ್) : ಕಳ್ಳಿಗೆ ಗ್ರಾಮದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹ ನಿಶ್ಚಿತಾರ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ.
ಮೃತ ಯುವತಿಯನ್ನು ಪಚ್ಚಿನಡ್ಕ ನಿವಾಸಿ ಚೈತ್ರ (22) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಚೈತ್ರ ಅವರು ಗುರುವಾರ ರಾತ್ರಿ ಸ್ನೇಹಿತೆಯ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು.
ಚೈತ್ರ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಚೈತ್ರಾಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಚೈತ್ರಾ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಆಕೆಯನ್ನು ತುಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಚೈತ್ರಾ ಮೃತಪಟ್ಟಿದ್ದಾಳೆ.
ಈ ಬಗ್ಗೆ ಆಕೆಯ ಸಂಬಂಧಿ ವಿವೇಕ್ ಆಚಾರ್ಯ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment