ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯದ ಪರ ಧ್ವನಿ ಎತ್ತಲಾಗದ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹ
ಮಂಗಳೂರು, ಫೆಬ್ರವರಿ 12s, 2024 (ಕರಾವಳಿ ಟೈಮ್ಸ್) : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆದ್ದುಕೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸಂಜೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ
ಸಿದ್ಧತೆಗಳು ಈಗಿಂದಲೇ ನಡೆಯುತ್ತಿದ್ದು, ಈ ತಿಂಗಳಾಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಇದರ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಪಟ್ಟಿ ಅಂತಿಮವಾಗಲಿದೆ ಎಂದ ಅವರು ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್ಸಿನ ಐವರ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ ಎಂದರು.
ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಈ ಬಾರಿ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಬೃಹತ್ ಸಮಾವೇಶ ಫೆ. 17 ರಂದು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಉಪಮುಖ್ಯಮಂತ್ರಿಗಳೂ ಆಗಿರುವ ಡಿ ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪಕ್ಷದ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಸಲೀಂ ಅಹ್ಮದ್ ಹೇಳಿದರು.
ಕೇಂದ್ರ ಸರ್ಕಾರ ಕಳೆದ 5 ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯ ಮಾಡಿದೆ. ನಮಗೆ ಬೇಕಾದ ಹಣದ ಪಾಲನ್ನು ನೀಡುತ್ತಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಅವರು ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. 4 ಮಂದಿ ಕೇಂದ್ರ ಸಚಿವರು ಇದ್ದರೂ ಪ್ರಯೋಜನ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಅವರಲ್ಲಿ ಕೇಳಿದರೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ನಿರ್ಮಲಾ ಸೀತಾರಾಮನ್‍ಗೆ ರಾಜ್ಯದ ಪರ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಇದೇ ವೇಳೆ ಸಲೀಂ ಅಹ್ಮದ್ ಸವಾಲೆಸೆದರು.
ಈ ಸಂದರ್ಭ ಮಾಜಿ ಸಚಿವರಾದ ಬಿ ರಮಾನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಎಂ ಎಲ್ ಸಿ ಡಾ ಮಂಜುನಾಥ್ ಭಂಡಾರಿ, ಮಾಜಿ ಎಂ ಎಲ್ ಸಿ ಐವನ್ ಡಿ’ಸೋಜಾ, ಪಕ್ಷ ಪ್ರಮುಖರಾದ ಮಿಥುನ್ ರೈ, ಜೆ ಆರ್ ಲೋಬೊ, ಶಶಿದರ್ ಹೆಗ್ಡೆ, ಮಮತಾ ಗಟ್ಟಿ, ಸುರೇಶ್ ಬಲ್ಲಾಳ್, ಮನೋಹರ್ ರಾಜೀವ್, ಕೃಪಾ ಆಳ್ವಾ, ವಿಸ್ವಾಶ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment