ಬೆಂಗಳೂರು, ಜುಲೈ 24, 2024 (ಕರಾವಳಿ ಟೈಮ್ಸ್) : ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಯಿಸಿದ ಅವರು, ಕೇಂದ್ರ ಸರಕಾರದ ಈ ಉದ್ದೇಶಪೂರ್ವಕ ನಿರ್ಲಕ್ಷ÷್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ ೨೭ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರಕಾರ ನಿರ್ಧರಿಸಿದೆ ಎಂದಿದ್ದಾರೆ.
ಮಂಗಳವಾರ ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರಕಾರದ ಮೇಲಿನ ವಿಶ್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹು ದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ-ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ ೩ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರಕಾರದ ತಾರತಮ್ಯ ನೀತಿಯನ್ನು ಸೂಕ್ಷ÷್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರಕಾರ ನಿರ್ಧಾರ ಮಾಡಿದಂತಿದೆ. ಎಂದಿರುವ ಸಿಎಂ ಸಿದ್ದರಾಮಯ್ಯ ದೇಶದಲ್ಲಿ ೨೮ ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಕಿಡಿ ಕಾರಿದ್ದಾರೆ.
ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ÷್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
0 comments:
Post a Comment