ಬಂಟ್ವಾಳ, ಆಗಸ್ಟ್ 14, 2024 (ಕರಾವಳಿ ಟೈಮ್ಸ್) : ಪ್ರಸ್ತುತ ಸನ್ನಿವೇಶದಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಯುವ ಜನತೆಯು ಮಾದಕ ವಸ್ತುಗಳ ಸೇವನೆಯಲ್ಲಿ ಮುಂದಿರುವುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಇದು ಭವಿಷ್ಯದ ಸಮಾಜವನ್ನು ಹಾಳುಮಾಡುವುದರಲ್ಲಿ ಸಂದೇಹವಿಲ್ಲ. ಇದರಿಂದ ವಿದ್ಯಾರ್ಥಿಗಳು ಇದರ ಅಪಾಯವನ್ನು ಅರಿತುಕೊಂಡು ಜಾಗೃತರಾಗಬೇಕು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಡಾ ಸುಯೋಗವರ್ಧನ್ ಡಿ ಎಂ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಇದೇ ವೇಳೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿರುವ ಅನುಕೂಲಗಳು, ಪದವಿ ಅಧ್ಯಯನದ ಅವಶ್ಯಕತೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವಣ್ಣ ಪ್ರಭು ಪಠ್ಯ ಕ್ರಮದ ಸ್ವರೂಪದ ಕುರಿತು ವಿವರಿಸಿದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಅವರು ಎನ್ ಎಸ್ ಎಸ್ ಹಾಗೂ ಎನ್ ಸಿ ಸಿ ಯೋಜನೆಗಳ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿನಿಯರಾದ ಹೇಮಲತಾ, ಶಾಖಾಂಬರಿ ಪ್ರಾರ್ಥಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಹನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment