ಬಂಟ್ವಾಳ, ಡಿಸೆಂಬರ್ 21, 2024 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದ ಪುಟಾಣಿಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರಾವಳಿ ಟೈಮ್ಸ್ ಪ್ರಕಟಿಸಿದ ವರದಿಗೆ ಸ್ಪಂದಿಸಿದ ಬಂಟ್ವಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ (ಸಿಡಿಪಿಒ) ಮಮ್ತಾಝ್ ಅವರು ಶನಿವಾರ ತುರ್ತಾಗಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಯಿಸಿದ ಅವರು, ಅಂಗನವಾಡಿ ಕೇಂದ್ರದ ಸುತ್ತ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಪುಟಾಣಿಗಳ ಹಿತ ರಕ್ಷಣೆಗೆ ಇಲಾಖೆ ಸದಾ ಕಟಿಬದ್ದವಾಗಿದ್ದು, ಬೇಕಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗ್ಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕರನ್ನು ಸ್ಥಳಕ್ಕೆ ಕರೆಸಿ ಮಾಹಿತಿ ಪಡೆದುಕೊಳ್ಳಲಾಗಿದ್ದು, ಈ ಬಗ್ಗೆ ತಾಲೂಕು ತಹಶೀಲ್ದಾರ್ ಹಾಗೂ ಕಂದಾಯ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಸರಕಾರಿ ಕಟ್ಟಡ ಹಾಗೂ ಜಮೀನುಗಳ ಬಗ್ಗೆ ಹಕ್ಕು ಸಾಧಿಸಲು ಖಾಸಗಿ ವ್ಯಕ್ತಿಗಳಿಗೆ ಅವಕಾಶ ನೀಡುವುದಿಲ್ಲ. ಮುಂದಿನ 20 ದಿನಗಳ ಒಳಗೆ ಇಲ್ಲಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವ ಮೂಲಕ ಅಂಗನವಾಡಿ ಕೇಂದ್ರದ ಪುಟಾಣಿಗಳು ಹಾಗೂ ಕಾರ್ಯಕರ್ತೆಯರ ಹಿತ ಕಾಪಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಯಿಸಿದ ಶಿಶು ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಉಸ್ಮಾನ್ ಅವರು, ಪಾಣೆಮಂಗಳೂರು ಅಂಗನವಾಡಿ ಸಮಸ್ಯೆಗೆ ಸಂಬಂಧಿಸಿದಂತೆ ತಾಲೂಕು ಅಧಿಕಾರಿಗಳಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರ ಗಿಡ-ಪೊದೆಗಳಿಂದ ಆವೃತವಾಗಿದ್ದು, ಸ್ವಚ್ಛಗೊಳಿಸುವ ಜವಾಬ್ದಾರಿ ವಹಿಸದ ಇಲಾಖೆಗಳ ನಿರ್ಲಕ್ಷ್ಯದಿಂದ ಕೇಂದ್ರದೊಳಗೆ ನಾಗರ ಹಾವು ಸಹಿತ ಸರೀಸೃಪಗಳು ಹರಿದಾಡುತ್ತಿದ್ದು, ಪುಟಾಣಿಗಳ ರಕ್ಷಣೆ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ ಬಗ್ಗೆ ಕರಾವಳಿ ಟೈಮ್ಸ್ ಗುರುವಾರ ಸಚಿತ್ರ ವರದಿ ಪ್ರಕಟಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿತ್ತು.
0 comments:
Post a Comment