ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ : ಡಿ 10 ರಿಂದ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ, ಡಿ 11 ರಂದು ಅಂತ್ಯ ಕ್ರಿಯೆ ಹಿನ್ನಲೆ ಶಾಲಾ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ - Karavali Times ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ : ಡಿ 10 ರಿಂದ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ, ಡಿ 11 ರಂದು ಅಂತ್ಯ ಕ್ರಿಯೆ ಹಿನ್ನಲೆ ಶಾಲಾ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ - Karavali Times

728x90

9 December 2024

ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ : ಡಿ 10 ರಿಂದ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ, ಡಿ 11 ರಂದು ಅಂತ್ಯ ಕ್ರಿಯೆ ಹಿನ್ನಲೆ ಶಾಲಾ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ

 ಬೆಂಗಳೂರು, ಡಿಸೆಂಬರ್ 10, 2024 (ಕರಾವಳಿ ಟೈಮ್ಸ್) : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಮಂತ್ರಿ, ಮಾಜಿ ರಾಜ್ಯಪಾಲ ಐಟಿ-ಬಿಟಿ ಕ್ಷೇತ್ರದಲ್ಲಿ ಅತ್ಯರ್ಮೋಘ ಇತಿಹಾಸ ನಿರ್ಮಿಸಿದ ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ (92) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಮಂದಿ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ನಿಧನ ಹಿನ್ನಲೆಯಲ್ಲಿ ರಾಜ್ಯ ಸರಕಾರ ಡಿಸೆಂಬರ್ 10 ರಿಂದ 12ರವರೆಗೆ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಅವರ ಅಂತ್ಯ ಕ್ರಿಯೆ ನಡೆಯುವ ದಿನ ಡಿಸೆಂಬರ್ 11 ರ ಬುಧವಾರ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದ್ದು, ಶಾಲಾ-ಕಾಲೇಜಿಗಳು ಹಾಗೂ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಿ ಸರಕಾರ ಆದೇಶಿಸಿದೆ. 

ಶೋಕಾಚರಣೆಯ ಮೂರು ದಿನಗಳ ಕಾಲ ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕ£ಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ರಾಜ್ಯಾದ್ಯಂತ ಎಲ್ಲಾ ರೀತಿಯ ಸಾರ್ವಜನಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶಿಸಲಾಗಿದೆ. ಸಕಲ ಸರಕಾರಿ ಗೌರವಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸರಕಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ. 

ಮಂಗಳವಾರ (ಡಿ 10) ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‍ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. 

ಮಂಗಳವಾರ ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬುಧವಾರ ಬೆಳಿಗ್ಗೆ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಸಾಗಿಸಲಾಗುತ್ತದೆ. 

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1 ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‍ನ ಡಲ್ಲಾಸ್‍ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ ನಿಂದಲೂ ಪದವಿ ಪಡೆದಿದ್ದರು. 

1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‍ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಎಂಟ್ರಿ ಮಾಡಿದರು. 

1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್ ಎಂ ಕೃಷ್ಣ ಪಾತ್ರ ವಹಿಸಿದ್ದಾರೆ. 

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್‍ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್‍ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ : ಡಿ 10 ರಿಂದ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ, ಡಿ 11 ರಂದು ಅಂತ್ಯ ಕ್ರಿಯೆ ಹಿನ್ನಲೆ ಶಾಲಾ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ Rating: 5 Reviewed By: karavali Times
Scroll to Top